ಕಾಸರಗೋಡು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕೇರಳದ ಕಾಸರಗೋಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಮೇ 25 ರಂದು ರೆಡ್ ಅಲರ್ಟ್ ಘೋಷಿಸಿದ್ದು, ಅತಿ ಹೆಚ್ಚು ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.
ಎಚ್ಚರಿಕೆಯ ಹಿನ್ನೆಲೆಯಲ್ಲಿ ಎರಡೂ ಜಿಲ್ಲೆಗಳ ಪ್ರಮುಖ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಲಾಗಿದೆ. ಕಾಸರಗೋಡಿನಲ್ಲಿ, ರಾಜಪುರಂನಂತಹ ಗುಡ್ಡಗಾಡು ಪ್ರದೇಶಗಳು ಮತ್ತು ಜಿಲ್ಲೆಯಾದ್ಯಂತ ಎಲ್ಲಾ ಬೀಚ್ಗಳಲ್ಲಿ ಬಿಗಿ ನಿಯಂತ್ರಣ ಜಾರಿಯಲ್ಲಿದೆ. ಹೈ-ರೇಂಜ್ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ದುರ್ಬಲ ವಲಯಗಳ ಮೇಲೆ ತೀವ್ರ ನಿಗಾ ಇರಿಸಲು ಸ್ಥಳೀಯ ಗ್ರಾಮ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನೈಋತ್ಯ ಮಾನ್ಸೂನ್ ಯಾವಾಗ ಬೇಕಾದರೂ ಕೇರಳಕ್ಕೆ ಅಪ್ಪಳಿಸಬಹುದೆಂದು IMD ಸೂಚಿಸಿದೆ.
ಭೂಕುಸಿತಕ್ಕೆ ಒಳಗಾಗುವ ಪ್ರದೇಶಗಳಲ್ಲಿ ಎಲ್ಲಾ ಟ್ರೆಕ್ಕಿಂಗ್ ಚಟುವಟಿಕೆಗಳು ಮತ್ತು ಸಾಹಸ ಪ್ರವಾಸವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ನದಿ ದಡ ಮತ್ತು ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಜಾಗರೂಕರಾಗಿರಲು ಸೂಚಿಸಲಾಗಿದೆ. ಭಾರೀ ಗಾಳಿಯೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಎಂದು ಹವಾಮಾನ ಇಲಾಖೆ ತಿಳಿಸಿದೆ.

